ಭಾರತೀಯ ಜನತಾ ಪಕ್ಷ ಎಲ್ಲ ಪ್ರದೇಶಗಳ ಅಭಿವೃದ್ಧಿಗೆ ನೀಲ ನಕಾಶೆ ರೂಪಿಸಿದೆ. 2023ಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಯಾವ ರೀತಿಯಲ್ಲಿ ಆಗಬೇಕು ಎಂಬ ಬಗ್ಗೆ ಸ್ಪಷ್ಟ ಕಲ್ಪನೆ ಬಿಜೆಪಿಗೆ ಇದೆ ಎಂದು ಸಮಾಜ ಕಲ್ಯಾಣ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರ ಪರ ಮತಯಾಚನೆ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು. ಸರಕಾರದ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಅರಿವಿದೆ. ಅಭಿವೃದ್ಧಿಗಾಗಿ ಜನತೆ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುತ್ತಾರೆ ಎಂದರು.
ಕಾಪು ಕ್ಷೇತ್ರದಲ್ಲಿಂದು ಮುಂಬಯಿ ಉತ್ತರ ಸಂಸದ ಗೋಪಾಲ ಶೆಟ್ಟಿ ಅವರು ಗುರ್ಮೆ ಸುರೇಶ್ ಶೆಟ್ಟಿ ಅವರ ಪರ ಮತ ಯಾಚಿಸಿದರು. ಪ್ರಚಾರಸಭೆಯಲ್ಲಿ ಮಾತನಾಡಿದ ಗುರ್ಮೆ ಅವರು ಗೋಪಾಲ ಶೆಟ್ಟಿ ಓರ್ವ ಆದರ್ಶ ರಾಜಕಾರಣಿ, ನೇರ ನಡೆ ನುಡಿಯ ವ್ಯಕ್ತಿ ಎಂದು ಬಣ್ಣಿಸಿದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಸರಳತೆಯನ್ನು ಕೊಂಡಾಡಿದ ಗುರ್ಮೆ ತಾವು ಶಾಸಕರಾದ ಬಳಿಕ ಇಂತಹ ಹಿರಿಯರ ಮಾರ್ಗದರ್ಶನ ಪಡೆದು ಕೆಲಸ ಮಾಡುವುದಾಗಿ ಹೇಳಿದರು.
ಕಾಪು ಕ್ಷೇತ್ರಕ್ಕೆ ಶಾಸಕ ಲಾಲಾಜಿ ಮೆಂಡನ್ ಅವರು 3000 ಕೋ.ರೂ.ಅನುದಾನ ತಂದು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಿರುವುದನ್ನು ಪ್ರಸ್ತಾಪಿಸಿದ ಅವರು ಇನ್ನುಳಿದ ಕಾಮಗಾರಿಗಳ ಮುಂದುವರಿಕೆಗೆ ಶಕ್ತಿ ಮೀರಿ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.